ಪ್ರಚೋದನಕಾರಿ ಭಾಷಣ ಪ್ರಕರಣ: ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ
ಬೆಳ್ತಂಗಡಿ: ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯದ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರು ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 315/2015ರಂತೆ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದಲ್ಲಿ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಆರೋಪಿಗೆ ಭಾರತೀಯ ದಂಡ ಸಂಹಿತೆಯ ಕಲಂ 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.


