ಕಾಲೇಜಿನಲ್ಲಿ ಗಾಂಜಾ ಪತ್ತೆ, ಪ್ರಕರಣ ದಾಖಲು
ಮಂಗಳೂರು: ಕಾಲೇಜು ಆವರಣದಲ್ಲಿ ಸುಮಾರು 290 ಗ್ರಾಂ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಹೊಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿರುವ ಘಟನೆ ನಡೆದಿದೆ.

ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ ಬಳಿಕ ಆಡಳಿತ ಮಂಡಳಿ ಕಾಲೇಜಿನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿತ್ತು. ಇದರ ಭಾಗವಾಗಿ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಿ ಸಕ್ರಿಯವಾಗಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಗಾಂಜಾ ಪತ್ತೆಯಾಗಿದೆ.
ಕಾಲೇಜು ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷೆಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮಾದಕವಸ್ತು ಸೇವನೆಗೆ ಸಂಬಂಧಿಸಿದ ಕಲಂ 27(b) ಹಾಗೂ ಮಾದಕವಸ್ತುಗಳ ಅಕ್ರಮ ಹೊಂದಾಣಿಕೆ/ವ್ಯವಹಾರಕ್ಕೆ ಸಂಬಂಧಿಸಿದ ಕಲಂ 8(c) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜಿಗೆ ಗಾಂಜಾ ತಂದಿದ್ದಾನೆ ಎನ್ನಲಾದ ವಿದ್ಯಾರ್ಥಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನ ಶೈಕ್ಷಣಿಕ ಸ್ಥಿತಿ ಹಾಗೂ ವಶಪಡಿಸಿಕೊಂಡಿದ್ದ ಗಾಂಜಾದ ಪ್ರಮಾಣವನ್ನು ಪರಿಗಣಿಸಿದ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ಪೆಡ್ಲರ್‌ಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪೂರೈಕೆದಾರನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.



