ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಆರೋಪಿ ಬಂಧನ
ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ.

ಪುತ್ತೂರು ಬೆಟ್ಟಂಪಾಡಿ ನಿವಾಸಿ ಹಾಗೂ ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ್ ಬಿ. (44) ಅವರು ನೀಡಿದ ದೂರಿನಂತೆ, ಆ.24ರಂದು ರಾತ್ರಿ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಅಪರಿಚಿತ ವ್ಯಕ್ತಿಯೊಬ್ಬರು ಕಳವು ಮಾಡಿಕೊಂಡು ಹೋಗಿದ್ದರು. ಆ.25ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದಾಗ ಕಾಣಿಕೆ ಡಬ್ಬಿ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕಳ್ಳತನದ ದೃಶ್ಯ ಪತ್ತೆಯಾಗಿತ್ತು. ಡಬ್ಬಿಯಲ್ಲಿ ಸುಮಾರು ₹4,500 ಹಣವಿದ್ದು, ಕಾಣಿಕೆ ಡಬ್ಬಿಯ ಮೌಲ್ಯ ₹2,500 ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 110/2026, ಕಲಂ 305(e) ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿತ್ತು.
ಆರೋಪಿಯ ಪತ್ತೆಗಾಗಿ ಪೊಲೀಸರು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಭಾಗಗಳಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಕೇರಳ ಕಾಸರಗೋಡು ನಿವಾಸಿ ಸತೀಶ್ (31) ಎಂಬಾತನನ್ನು ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಕಾಣಿಕೆ ಡಬ್ಬಿ ಹಾಗೂ ಕಳ್ಳತನಕ್ಕೆ ಬಳಸಿದ್ದ ಅಂದಾಜು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿ ವಿರುದ್ಧ ಈಗಾಗಲೇ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಅವರ ನಿರ್ದೇಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐಗಳಾದ ಗುಣಪಾಲ ಜೆ. ಹಾಗೂ ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದಲ್ಲಿ ನಡೆದಿದೆ.
ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ರಮೇಶ್, ನಾಗರಾಜ, ಮಂಜುನಾಥ, ಆಕಾಶ್, ಕಾರ್ತಿಕ್, ಅಪರಾಧ ವಿಭಾಗದ ಶರಣಪ್ಪ ಪಾಟೀಲ್, ಈರಣ್ಣ ಹಾಗೂ ಹರಿಪ್ರಸಾದ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಿಡಿಆರ್ ವಿಭಾಗದ ಸಂಪತ್ ಹಾಗೂ ದಿವಾಕರ್ ಸಹಕರಿಸಿದ್ದರು.


