ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ: 10 ಮೊಬೈಲ್ ಫೋನ್ ವಶ
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಮೊಬೈಲ್ ಫೋನ್ಗಳನ್ನು ಬಳಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತ ದಾಳಿ ನಡೆಸಿ 10 ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026ರಂತೆ ಕಲಂ 323 ಬಿಎನ್ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ತನಿಖೆಯ ಭಾಗವಾಗಿ ಮಂಗಳೂರು ಜಿಲ್ಲಾ ಕಾರಾಗೃಹದ ವಿವಿಧ ಭಾಗಗಳಲ್ಲಿ ತಪಾಸಣೆ ನಡೆಸಿದಾಗ, ಎ-ಬ್ಲಾಕ್ನಲ್ಲಿದ್ದ ಕೈದಿಗಳ ಪೈಕಿ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಹಾಗೂ ಅರ್ಫಜ್ ಎಂಬ 9 ಕೈದಿಗಳಿಂದ ಒಟ್ಟು 10 ಮೊಬೈಲ್ ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ಪ್ರಕಾರ, ಮೊದಲ ನಾಲ್ವರು ಕೈದಿಗಳು ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. 5ರಿಂದ 8ನೇ ಕೈದಿಗಳು ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿರುವ ಮಾದಕವಸ್ತು ಪೆಡ್ಲಿಂಗ್ ಪ್ರಕರಣಗಳ ಆರೋಪಿಗಳಾಗಿದ್ದು, 9ನೇ ಕೈದಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ.
ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳ ಬಳಕೆ, ಪೂರೈಕೆ ಹಾಗೂ ಅವುಗಳನ್ನು ಕಾರಾಗೃಹದೊಳಗೆ ತಲುಪಿಸಿದ ಕುರಿತು ಬರ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ಆಯಾಮಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.


