ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ–ಲಾರಿ ವಶಕ್ಕೆ
ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸೆ.30ರಂದು ಮುಂಜಾನೆ, ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ಬಾಳ್ತಿಲ ಗ್ರಾಮದ ಪುರ್ಲಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್ ಮೇಲೆ ಗೂಡ್ಸ್ ಲಾರಿಯನ್ನು ತಡೆದಿದ್ದಾರೆ.
ಪೊಲೀಸರು ಲಾರಿಯನ್ನು ತಡೆದ ವೇಳೆ ಚಾಲಕ ಪರಾರಿಯಾಗಿದ್ದು, ಲಾರಿಯನ್ನು ಪರಿಶೀಲಿಸಿದಾಗ ಒಳಭಾಗದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿದ್ದ ಒಟ್ಟು 24 ಜಾನುವಾರುಗಳು ಪತ್ತೆಯಾಗಿವೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 134/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7, 12 ಹಾಗೂ Prevention of Cruelty to Animals Act, 1960ರ ಕಲಂ 11(1)(d) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

