ಕರಾವಳಿಕ್ರೈಂಜಿಲ್ಲೆ

ಬಂಟ್ವಾಳ: ಪತಿಯಿಂದ ಪತ್ನಿಯ ಕೊಲೆ ಶಂಕೆ, ಆರೋಪಿ ಪೊಲೀಸ್ ವಶಕ್ಕೆ


ಬಂಟ್ವಾಳ: ಪತ್ನಿಗೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಅರುಣ್ ಮಹಾದೇವ್ ದೇಸಂಗಿ (26) ಎಂಬವರ ಸಹೋದರಿ ಸುನೀತಾ ಮಹಾದೇವ್ ದೇಸಂಗಿ (34) ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ (36) ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳು ಬಂಟ್ವಾಳದ ವಗ್ಗದಲ್ಲಿ ವಾಸವಾಗಿದ್ದರು. ಇವರ ನಡುವೆ ವೈವಾಹಿಕ ಕಲಹ ಉಂಟಾಗಿದ್ದು, ಸಂಬಂಧಿಕರು ರಾಜಿ ಸಂಧಾನ ನಡೆಸಿದ್ದರು ಎನ್ನಲಾಗಿದೆ.


ಸುನೀತಾ ಅವರು ಹೆರಿಗೆಯ ಬಳಿಕ ತವರು ಮನೆಯಲ್ಲಿದ್ದರು. ಅ. 4ರಂದು ಆರೋಪಿ ಸಂಜೀವಕುಮಾರ್ ಅವರನ್ನು ಬಂಟ್ವಾಳದ ತನ್ನ ಮನೆಗೆ ಕರೆತಂದಿದ್ದ. ಅ. 22ರಂದು ಸುನೀತಾ ಅವರು ಸಹೋದರ ಅರುಣ್‌ಗೆ ಕರೆ ಮಾಡಿ, ಪತಿ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅ. 23ರಂದು ಮುಂಜಾನೆ ಸಂಜೀವಕುಮಾರ್ ಅರುಣ್‌ಗೆ ಕರೆ ಮಾಡಿ, ಸುನೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ತಿಳಿಸಿದ್ದಾನೆ. ಬಳಿಕ ಸ್ಥಳಕ್ಕೆ ಬಂದ ಅರುಣ್ ಪರಿಶೀಲಿಸಿದಾಗ ಸುನೀತಾ ಮೃತಪಟ್ಟಿರುವುದು ಕಂಡುಬಂದಿದೆ. ಮೃತದೇಹದ ಮೇಲೆ ಹಲ್ಲೆಯ ಗಾಯಗಳು ಹಾಗೂ ರಕ್ತದ ಗುರುತುಗಳು ಕಂಡುಬಂದಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.


ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅ. 22ರ ರಾತ್ರಿ ಮತ್ತು ಅ. 23ರ ಮುಂಜಾನೆಯ ನಡುವಿನ ಅವಧಿಯಲ್ಲಿ ಸುನೀತಾ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಅರುಣ್ ದೂರು ನೀಡಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 142/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಂಜೀವಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!