ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರಿನಲ್ಲಿ ಕಾರ್ಯನಿರ್ವಹಣೆ) ತೀರ್ಪು ನೀಡಿದೆ.

ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ಶಿಕ್ಷೆಗೊಳಗಾದ ಆರೋಪಿ.
ಅಪ್ರಾಪ್ತ ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2019ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಹಾಗೂ ತನಿಖಾಧಿಕಾರಿ ನಾಗೇಶ್ ಕೆ. ಅವರು ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಎಲ್) ಮತ್ತು 5(ಜೆ)(ii) ಸಹಿತ ಸೆಕ್ಷನ್ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಅಲ್ಲದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಮತ್ತೊಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದ್ದು, ಎರಡೂ ಸೆಕ್ಷನ್ಗಳಡಿ ವಿಧಿಸಿರುವ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ.
ಆರೋಪಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಆತ ರೌಡಿಶೀಟರ್ ಆಗಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ವಾದ ಮಂಡಿಸಿದ್ದರು.


