ಕರಾವಳಿಕ್ರೈಂ

ಮಂಗಳೂರಿನಲ್ಲಿ ಸಿಸಿಬಿ ಪೊಲೀಸರ ದಾಳಿ: ರೂ.3.35 ಲಕ್ಷ ಮೌಲ್ಯದ ಎಲ್‌ಎಸ್‌ಡಿ ಡ್ರಗ್ಸ್ ವಶ; ಇಬ್ಬರ ಬಂಧನ


ಮಂಗಳೂರು: ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ  ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದು, ಅವರಿಂದ 100 ಎಲ್‌ಎಸ್‌ಡಿ ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.


ಬೆಂಗಳೂರು ನಗರದಿಂದ ಎಲ್‌ಎಸ್‌ಡಿ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿಗೆ ತಂದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ.3ರಂದು ಮಧ್ಯಾಹ್ನ ಮಂಗಳೂರಿನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹3 ಲಕ್ಷ ಮೌಲ್ಯದ 100 ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ಅಂದಾಜಿಸಲಾಗಿದೆ.



ಬಂಧಿತರನ್ನು ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30), ಅಳಪೆ, ಪಡೀಲ್ ಹಾಗೂ ಸಿದ್ದಾರ್ಥ ಶೆಟ್ಟಿ (35), ಉರ್ವ ಸ್ಟೋರ್ ಎಂದು ಗುರುತಿಸಲಾಗಿದೆ.
ಬಂಧಿತ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಮತ್ತೊಬ್ಬ ಆರೋಪಿ ಸಿದ್ದಾರ್ಥ ಶೆಟ್ಟಿ ವಿರುದ್ಧ ಬರ್ಕೆ ಹಾಗೂ ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಮತ್ತು ಗಾಂಜಾ ಮಾರಾಟ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!