ಕರಾವಳಿಕ್ರೈಂ

ಮಂಗಳೂರು: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ – ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು



ಮಂಗಳೂರು: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.


ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನ ಮೇಲೆ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಅವರು 2026ರ ಮೇ 13ರಂದು ಲೈಂಗಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ನೀಡಲಾದ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 50/2026ರಂತೆ ಬಿಎನ್‌ಎಸ್ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.



ಇದಕ್ಕೂ ಮೊದಲು 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇದೇ ಧರ್ಮಗುರುಗಳ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 212/2026ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.


ಪ್ರಸ್ತುತ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಪ್ರಕರಣದ ಮುಂದಿನ ತನಿಖೆಯ ಜವಾಬ್ದಾರಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯವರಿಗೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!