ಕರಾವಳಿಕ್ರೈಂ

ಬಂಟ್ವಾಳ: ತಲವಾರು ತೋರಿಸಿ ರೂ.8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣದ ಮಾರಾಟ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಮಯ್ಯದಿ (40) ಎಂಬವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ತಲವಾರು ತೋರಿಸಿ ಬೆದರಿಸಿ ರೂ.8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.



ಘಟನೆ ವಿವರ: ದಿನಾಂಕ 20.08.2026ರಂದು ಮಯ್ಯದಿ ಅವರು ವಿವಿಧ ಅಂಗಡಿಗಳಿಂದ ಸಂಸ್ಥೆಯ ವ್ಯವಹಾರದ ಹಣವನ್ನು ಸಂಗ್ರಹಿಸಿಕೊಂಡು ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ತಲುಪಿದಾಗ, ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ರೂ.8,35,000 ನಗದನ್ನು ದರೋಡೆಗೈದು ಪರಾರಿಯಾಗಿದ್ದರು.


ಈ ಬಗ್ಗೆ ನೀಡಲಾದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 115/2026, ಕಲಂ 309(6) ಬಿಎನ್‌ಎಸ್ ಹಾಗೂ ಕಲಂ 25(1)(A) ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು, ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬ ಮೂವರು ಆರೋಪಿಗಳನ್ನು ನವೆಂಬರ್ 11ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಮತ್ತು ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.



ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆರೋಪಿಗಳಿಂದ ರೂ.2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಆರೋಪಿ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ (Identification Parade) ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!