ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ: ಭಾರೀ ಆಕ್ರೋಶ
ಹಿಂಸಾಚಾರ ಪೀಡಿತ ಮಣಿಪುರ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೈಶಾಚಿಕ ಘಟನೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಮೇ 4ರಂದು ನಡೆದಿದ್ದ ಘಟನೆ ಎನ್ನಲಾಗಿದ್ದು ಅದರ ವಿಡಿಯೋ ಈಗ ವೈರಲ್ ಆಗಿದ್ದು ಪ್ರಕರಣ ಪ್ರಮುಖ ಆರೋಪಿ ಹೆರದಾಸ್ ಎಂಬಾತನನ್ನು ಬಂಧಿಸಲಾಗಿದೆ. ಹಸಿರು ಟಿ-ಶರ್ಟ್ ಧರಿಸಿದ್ದ ಹೆರದಾಸ್ ಎನ್ನುವ ಆರೋಪಿಯನ್ನು ವಿಡಿಯೋನಲ್ಲಿ ಗುರುತಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ವಿಡಿಯೋವನ್ನು ಹಂಚಿಕೊಳ್ಳದಂತೆ ಟ್ವಿಟರ್ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಟ್ವೀಟರ್ ಸೇರಿ ವಿವಿಧ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚಿಸಿದೆ.
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಸಿಜೆ, ಈ ಸಂಬಂಧ ವರದಿ ನೀಡುವಂತೆ ಕೇಂದ್ರ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಸೂಚನೆ ಕೊಟ್ಟಿದ್ದಾರೆ.
ಸಾಮೂಹಿಕ ಅತ್ಯಾಚಾರ ಬಳಿಕ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ಮಹಿಳೆಯರನ್ನು ಮೆರವಣಿಗೆಯಲ್ಲಿ ಕರೆದೊಯ್ಯುವ ವೇಳೆ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ ಎಸಗಲಾಗಿದ್ದು, ಪೈಶಾಚಿಕ ಕೃತ್ಯಕ್ಕೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.